ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಎಬಿವಿಪಿ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಸೆ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಆಗ್ರಹಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ಕರ್ನಾಟಕದ ಕರಾವಳಿ ಭಾಗದ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಮಂಗಳೂರು ವಿಶಿಷ್ಟ ಸ್ಥಾನ ಹೊಂದಿದ್ದು, ‘ಶಿಕ್ಷಣ ಕಾಶಿ’ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಆದರೆ ಈ ಹೆಗ್ಗಳಿಕೆಗೆ ತಕ್ಕಂತೆ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಮೂಲಭೂತ ಶೈಕ್ಷಣಿಕ ಸೌಕರ್ಯಗಳು ಇನ್ನೂ ಸಮರ್ಪಕವಾಗಿ ಅಭಿವೃದ್ಧಿಯಾಗಿಲ್ಲ. ವಿಶೇಷವಾಗಿ ಕರಾವಳಿ ಕರ್ನಾಟಕದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾಲಯ ಇಂದು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದರು.
ಮಂಗಳೂರು ವಿಶ್ವವಿದ್ಯಾಲಯದ ಪುನಶ್ಚೇತನಕ್ಕಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಗಣನೀಯವಾಗಿ ಕುಸಿದಿದ್ದು, ಹಲವು ವಿಭಾಗಗಳು ಶೈಕ್ಷಣಿಕವಾಗಿ ದುರ್ಬಲಗೊಂಡಿರುವುದು ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಆತಂಕಕಾರಿ ಬೆಳವಣಿಗೆಯಾಗಿದೆ. ವಿಶ್ವವಿದ್ಯಾಲಯದ ಆಡಳಿತ, ಹಣಕಾಸು ವ್ಯವಹಾರಗಳು, ಕಾಮಗಾರಿಗಳು, ಟೆಂಡರ್‌ಗಳು, ನೇಮಕಾತಿ ಮತ್ತು ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಯಾವುದೇ ಪೂರ್ವ ನಿರ್ಧಾರವಿಲ್ಲದೆ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ಸರ್ಕಾರ ಹೊಸ ತನಿಖಾ ವ್ಯವಸ್ಥೆಯನ್ನು ರಚಿಸಬೇಕು. ವಿಶೇಷವಾಗಿ ರೂಸಾ ಸೇರಿದಂತೆ ವಿಶ್ವವಿದ್ಯಾಲಯಕ್ಕೆ ದೊರೆತಿರುವ ಸರ್ಕಾರಿ ಅನುದಾನಗಳ ಬಳಕೆಯನ್ನೂ ಸಮಗ್ರವಾಗಿ ಪರಿಶೀಲಿಸಿ, ಅಕ್ರಮ ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ಪ್ರಮುಖರಾದ ಶಶಾಂಕ್ ಶೆಟ್ಟಿ, ಶ್ರೀಲಕ್ಷ್ಮೀ ಶೆಟ್ಟಿ, ತಸ್ಮಯ ಪಟೇಲ್ ಉಪಸ್ಥಿತರಿದ್ದರು.