ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಕುರಿತು ಮಹತ್ವದ ಸಭೆ: ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಚರ್ಚೆ

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಕುರಿತು ಮಹತ್ವದ ಸಭೆ: ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಚರ್ಚೆ


ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸರ್ಕಾರದ ಅಧೀನ ಮುಖ್ಯ ರಾಜ್ಯ ಸರ್ಕಾರದ ಅಧೀನ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಅವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಬಳಿಕ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಿತು. ಸುಮಾರು 600 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲಾನ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ, ಅಗತ್ಯ ಸರ್ಕಾರಿ ಅನುದಾನ, ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿರುವ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಚರ್ಚೆ:

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ರೂಪಿಸಲಾಗಿರುವ ಮಾಸ್ಟರ್ ಪ್ಲಾನ್ ಕಾಮಗಾರಿಗಳ ಪ್ರಗತಿ ಹಾಗೂ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಹೇಗಿರಬೇಕು ಎಂಬುದರ ಕುರಿತು ಅಧಿಕಾರಿಗಳು ಮತ್ತು ವಾಸ್ತುಶಿಲ್ಪಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ರಾಜೇಂದ್ರ ಕುಮಾರ್ ಕಟಾರಿಯ ಅವರು ತಿಳಿಸಿದರು.

ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಸಂಬಂಧಿಸಿದ ಭೂಸ್ವಾಧೀನ ಕಾರ್ಯಗಳು, ಸರ್ಕಾರಿ ಅನುದಾನ ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥದ ಬಗ್ಗೆಯೂ ಸಭೆಯಲ್ಲಿ ಗಮನಹರಿಸಲಾಯಿತು.

ಭಕ್ತರ ಸುರಕ್ಷತೆ ಹಾಗೂ ಸೌಲಭ್ಯಗಳಿಗೆ ಆದ್ಯತೆ:

ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನಕ್ಕಾಗಿ ಒಳಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದನ್ನು ಗಮನಿಸಿದ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಅವರು, ಭಕ್ತರ ಸುರಕ್ಷತೆ ಕುರಿತು ಅಧಿಕಾರಿಗಳ ಗಮನ ಸೆಳೆದರು.

ದೇವರ ದರ್ಶನದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಅವಘಡ ಸಂಭವಿಸಿದಲ್ಲಿ ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ದೇವಸ್ಥಾನದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳಿಗೆ ಸೂಕ್ತ ಭದ್ರತೆ ಒದಗಿಸುವ ಬಗ್ಗೆಯೂ ಚರ್ಚೆ ನಡೆಯಿತು. ಭಕ್ತರ ದರ್ಶನ ವ್ಯವಸ್ಥೆಯನ್ನು ತಿರುಪತಿ ಮಾದರಿಯಲ್ಲಿ ಸುಧಾರಿಸುವ ಕುರಿತು ಅಧೀನ ಮುಖ್ಯ ಕಾರ್ಯದರ್ಶಿ ಸಲಹೆ ನೀಡಿದರು.

ವೈದ್ಯಕೀಯದಿಂದ ವಸತಿಯವರೆಗೆ ಸಮಗ್ರ ಸೌಲಭ್ಯ:

ಕುಕ್ಕೆ ಸುಬ್ರಹ್ಮಣ್ಯ ಕರ್ನಾಟಕದ ಪ್ರಮುಖ ದೇವಸ್ಥಾನವಾಗಿದ್ದು, ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಕ್ತರು ಹಾಗೂ ಸ್ಥಳೀಯರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ರಾಜೇಂದ್ರ ಕುಮಾರ್ ಕಟಾರಿಯ ಅವರು ಮಾಧ್ಯಮಗಳಿಗೆ ತಿಳಿಸಿದರು.

ಮಾಸ್ಟರ್ ಪ್ಲಾನ್ ಕಾಮಗಾರಿಗಳೊಂದಿಗೆ ವೈದ್ಯಕೀಯ ಸೌಲಭ್ಯ, ಅಗ್ನಿಶಾಮಕ ವ್ಯವಸ್ಥೆ, ಆಂಬುಲೆನ್ಸ್ ಸೇವೆ, ರಕ್ಷಣಾ ವ್ಯವಸ್ಥೆ, ವಸತಿ ಸೌಲಭ್ಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಚರ್ಚಿಸಲಾಗಿದೆ ಎಂದರು.

ಈ ಸಂಬಂಧ ಮುಜರಾಯಿ ಇಲಾಖೆ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.

ಮುಜರಾಯಿ ಇಲಾಖೆಯ ಆಯುಕ್ತ ಶರತ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಲಲಿತಾ ಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ರಾಜು, ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್, ಕಡಬ ತಹಶೀಲ್ದಾರ್, ದೇವಳದ ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಲೋಕೋಪಯೋಗಿ ಇಲಾಖೆ ಸುಬ್ರಹ್ಮಣ್ಯ ವಿಶೇಷ ಉಪ ವಿಭಾಗದ ಇಂಜಿನಿಯರ್‌ಗಳು, ಒಳಚರಂಡಿ ಹಾಗೂ ನೈರ್ಮಲ್ಯ ಮಂಡಳಿಯ ಇಂಜಿನಿಯರ್‌ಗಳು, ಸರ್ವೆ ಇಲಾಖೆ ಸಹಾಯಕ ನಿರ್ದೇಶಕರು, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅಧೀನ ಮುಖ್ಯ ಕಾರ್ಯದರ್ಶಿಗಳು:

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಭಾರತದಲ್ಲಿ ಪ್ರಸಿದ್ಧಿ ಹೊಂದಿದ್ದು ವೇಗವಾಗಿ ಬೆಳೆಯುತ್ತಿದೆ ಇಲ್ಲಿಗೆ ದಿನಂಪ್ರತಿ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಭಕ್ತರ ಸುರಕ್ಷತೆ ಅವರ ಮೂಲಭೂತ ಸೌಕರ್ಯಕ್ಕೆ ಒತ್ತು ಕೊಡುವುದರೊಂದಿಗೆ ಇಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಕಡತಗಳನ್ನು ಶೀಘ್ರವಾಗಿ ಅಂತಿಮಗೊಳಿಸುವ ಬಗ್ಗೆ ವಿಶೇಷ ಗಮನಹರಿಸಿ ವಾಣಿಜ್ಯ ಹಾಗೂ ಇತರ ಕಟ್ಟಡಗಳನ್ನ ಕೂಡಲೇ ತೆರವುಗೊಳಿಸುವ ಕಾರ್ಯ ಕೈಗೊಳ್ಳಿ ಎಂದು ಖಡಕ್ಕಾಗಿ ಅಧಿಕಾರಿಗಳಿಗೆ ಎಚ್ಚರಿಸಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಭಕ್ತರ ಸುರಕ್ಷತೆ ಹಾಗೂ ಮೂಲಸೌಕರ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ನಡೆದ ಈ ಸಭೆ ಮಹತ್ವ ಪಡೆದುಕೊಂಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article