ಪಲ್ಗುಣಿ ನದಿ ತೀರದಲ್ಲಿ 1.50 ಕೋ. ವೆಚ್ಚದಲ್ಲಿ ಗೋಶಾಲೆ ನಿರ್ಮಾಣ: ಶೀಘ್ರವೇ ಶಿಲಾನ್ಯಾಸ
Saturday, October 24, 2026
ಬಂಟ್ಚಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತೀರದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಸುಸಜ್ಜಿತವಾದ ಗೋಶಾಲೆಯ ಕಾಮಗಾರಿಗೆ ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಗುವುದು ಎಂದು ಬಂಟ್ವಾಳ ಶಾಕ ರಾಜೇಶ್ ನಾಯ್ಕ್ ಉಳಿಪಾಡಿ ತಿಳಿಸಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದಂತೆ ಶನಿವಾರ ಪೊಳಲಿ ಕ್ಷೇತ್ರದಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಿದ ಶಾಸಕರು ಗೋಶಾಲೆಯ ನೀಲನಕ್ಷೆಯನ್ನು ಪರಿಶೀಲಿಸಿ, ನಿರ್ಮಾಣ ಕಾರ್ಯದ ಮುಂದಿನ ಹಂತಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಗೋಶಾಲೆಯ ಜೊತೆಗೆ ಸ್ನಾನಘಟ್ಟ, ಗೋಶಾಲೆಯ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಹಾಗೂ ಗೋದಾಮು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧವಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ವರ್ಕ್ ಆರ್ಡರ್ ಕೂಡ ನೀಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಮಾಧ್ಯಮಗಳಿಗೆ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಇಂಜಿನಿಯರ್ ಲಕ್ಷ್ಮಣ್ ಪೂಜಾರಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.