ವಿಶೇಷ ಚೇತನ ಮಗಳನ್ನು ಕತ್ತಿಯಿಂದ ಕಡಿದು ಕೊಲೆ: ತಾಯಿ ನೇಣು ಬಿಗಿದು ಆತ್ಮಹತ್ಯೆ
ಕುಂದಾಪುರ: ವಿಶೇಷ ಚೇತನ ಮಗಳನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಬಳಿಕ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕುಂದಾಪುರ ತಾಲೂಕಿನ ಶಾನಾಡಿ ಮದಗ ಕೊರಗ ಕಾಲೋನಿಯಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿ ಸುಪ್ರತಿ (14) ಹಾಗೂ ಪತ್ನಿ ನೇತ್ರಾವತಿ (40) ಎಂದು ಗುರುತಿಸಲಾಗಿದೆ. ಇವರು ಕೊರಗ ಸಮುದಾಯಕ್ಕೆ ಸೇರಿದವರಾಗಿದ್ದು, ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು.
ಸುಪ್ರತಿ ಹುಟ್ಟಿನಿಂದಲೇ ವಿಶೇಷ ಚೇತನ ಶಿಶುವಾಗಿದ್ದು, ನಡೆಯಲು ಅಥವಾ ಕುಳಿತುಕೊಳ್ಳಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು. ದಂಪತಿಗೆ ಒಂದು ವರ್ಷದ ಗಂಡು ಮಗುವೂ ಇದೆ.
ಭಾನುವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮನೆಯ ಕೆಲಸಗಳನ್ನು ಮುಗಿಸಿ, ವಿಶೇಷ ಚೇತನ ಮಗಳ ಕುತ್ತಿಗೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕುಟುಂಬದ ಪರಿಸ್ಥಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆಯ ಬಳಿಕವಷ್ಟೇ ಘಟನೆಯ ಹಿಂದಿನ ಕಾರಣ ಸ್ಪಷ್ಟವಾಗಬೇಕಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕೋಟ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಕುಂದಾಪುರ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ