ವಾಟರ್ ಪ್ಯೂರಿಫೈಯರ್‌ನಲ್ಲಿ ಬಚ್ಚಿಟ್ಟು ಕೊರಿಯರ್ ಮೂಲಕ ಸಾಗಾಟ: 1.58 ಕೋಟಿ ಮೌಲ್ಯದ ಎಂಡಿಎಂಎನೊಂದಿಗೆ ಮೂವರ ಸೆರೆ
ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, 1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು 1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ಸಮೀಪದ ಬೈದಲಾ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅಲ್ತಾಫ್ (28) ಎನ್ನುವವರಾಗಿದ್ದಾರೆ.
ಉಳ್ಳಾಲ ತಾಲೂಕು ಕುಂಪಲದ ಡಿಮಾರ್ಟ್ ಸಮೀಪ ಅ. 8ರಂದು ರಾತ್ರಿ 10 ಗಂಟೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಮಾದಕವಸ್ತು ಮಾರಾಟದ ಆರೋಪದಡಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಟೊ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,63,84,000 ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ನ ನೀರು ಸಂಗ್ರಹಿಸುವ ಭಾಗದಲ್ಲಿ ಅಡಗಿಸಿಟ್ಟು ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಬಳಿಕ ಮಾದಕವಸ್ತುವನ್ನು ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಸಿ ಮಾರಾಟ ಮಾಡಲು ಯೋಜಿಸಿದ್ದರು. ಈ ಜಾಲವನ್ನು ಆರಂಭದಲ್ಲೇ ಪತ್ತೆಹಚ್ಚಿ, ಮಾದಕವಸ್ತು ಪೂರೈಕೆಯನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ತಾಫ್ ವಿರುದ್ಧ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಮೂವರನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ.