ಹಾವು ಕಡಿತ: ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಸೂಚನೆ

ಹಾವು ಕಡಿತ: ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ಹಾವು ಕಡಿತ ಸಂದರ್ಭದಲ್ಲಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡದೆ, ಬೇರೆ ಆಸ್ಪತ್ರೆಗಳಿಗೆ ಕಳುಹಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾವು ಕಡಿತ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದಲ್ಲಿ ಹಾವು ಕಡಿತದಿಂದ ಮರಣ ಪ್ರಕರಣಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಾವು ಕಡಿತದಿಂದ ಸ್ಥಳೀಯ ಆಸ್ಪತ್ರೆಗೆ ರೋಗಿಗಳು ಬಂದಾಗ ಪ್ರಾಥಮಿಕ ಚಿಕಿತ್ಸೆ ನೀಡುವುದು ತುರ್ತು ಅಗತ್ಯವಾಗಿದೆ. ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ನೀಡದೆ ಬೇರೆ ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ದೊರಕಿಸುವಲ್ಲಿ ಅನಗತ್ಯ ವಿಳಂಬವಾಗಿ  ರೋಗಿಯು ಸಾವನ್ನಪ್ಪಿದ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂತಹ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಅವರು ಸೂಚಿಸಿದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾವು ಕಡಿತಕ್ಕೆ ನೀಡಬೇಕಾದ ಅಗತ್ಯ ಚಿಕಿತ್ಸೆ ಮತ್ತು ಔಷಧಿಗಳು ಲಭ್ಯವಿದೆ. ಈ ನಿಟ್ಟಿನಲ್ಲಿ ಹಾವು ಕಡಿತವಾದಾಗ ತಕ್ಷಣ ರೋಗಿಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ ಗ್ರಾಮ ಸಭೆಗಳಲ್ಲಿ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಗೆ ಅವರು ಸೂಚಿಸಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್. ಆರ್. ತಿಮ್ಮಯ್ಯ ಮಾತನಾಡಿ, ಹಾವು ಕಡಿತವನ್ನು ಅಧಿಸೂಚಿತ ಖಾಯಿಲೆಯಾಗಿ ರಾಜ್ಯ ಸರ್ಕಾರ ಘೋಷಿಸಿದೆ.  ಇದರಿಂದ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು ಹಾವು ಕಡಿತದಿಂದ ಬಂದ ರೋಗಿಗಳ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2023 ರಲ್ಲಿ 365, 2024 ರಲ್ಲಿ 625 (4 ಸಾವು), 2025 ರಲ್ಲಿ 752 (5 ಸಾವು), 2026 ರ ಸೆಪ್ಟೆಂಬರ್ ವರೆಗೆ  527  (4 ಸಾವು ) ಹಾವು ಕಡಿತ ಪ್ರಕರಣಗಳು ಸಂಭವಿಸಿದೆ ಎಂದು ಮಾಹಿತಿ ನೀಡಿದರು. 

ಸಭೆಯಲ್ಲಿ ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ವಿವಿಧ ಇಲಾಖೆ ಅಧಿಕಾರಿಗಳು ಆಸ್ಪತ್ರೆಯ ಪ್ರತಿನಿಧಿಗಳು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article