ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಖಂಡನೆ: ಪೊಲೀಸರ ಅಮಾನತಿಗೆ ಶಾಸಕ ಕಾಮತ್ ಆಗ್ರಹ
ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪರೀಕ್ಷೆ ಮುಂದೂಡುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮತ್ತು ಕಾಲೇಜು ಆಡಳಿತದ ನಡುವಿನ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂಬ ವಿಶ್ವಾಸವಿತ್ತು. ಹೀಗಾಗಿ ತಾವು ಸ್ಥಳಕ್ಕೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ. ಆದರೆ, ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆದುಕೊಂಡ ರೀತಿ ಆಘಾತಕಾರಿಯಾಗಿದೆ ಎಂದರು.
ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ಉಸ್ತುವಾರಿ ಕಾರ್ಯದರ್ಶಿ ಯು.ಟಿ. ಖಾದರ್ ಅವರಿಗೆ ದೂರವಾಣಿ ಕರೆ ಮಾಡಿ, ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದೆ. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಗಮನಕ್ಕೂ ವಿಷಯವನ್ನು ತರಲಾಗಿತ್ತು. ಮಹಿಳಾ ಪೊಲೀಸ್ ಅಧಿಕಾರಿಗಳಿಲ್ಲದೆ ಮಹಿಳೆಯರನ್ನು ದೂಡಿ, ಹಲ್ಲೆ ನಡೆಸುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಇಂತಹ ವರ್ತನೆ ಸರಿಯಲ್ಲ ಎಂದು ತಿಳಿಸಿದ್ದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಮಸ್ಯೆ ಕಾಲೇಜು ಆಡಳಿತದೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳುವ ವಿಚಾರವಾಗಿತ್ತು. ಆದರೆ, ಮನವಿ ಮಾಡಿದ ಬಳಿಕವೂ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ವಿಷಾದನೀಯ. ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಹಾಗೂ ಮನವಿ ಸಲ್ಲಿಸಲು ಅವಕಾಶ ನೀಡಬೇಕಿತ್ತು. ಮಾಧ್ಯಮಗಳ ಮುಂದೆ ವಿದ್ಯಾರ್ಥಿಗಳು ವ್ಯಕ್ತಪಡಿಸಿದ ಅಳಲು ಮತ್ತು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕಿತ್ತು ಎಂದರು.
ವಿದ್ಯಾರ್ಥಿಯೊಬ್ಬ ’ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನೂ ಅವರು ಪ್ರಸ್ತಾಪಿಸಿದರು. ದೇಶಭಕ್ತಿಯ ಘೋಷಣೆ ಕೂಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳ ಮೇಲೆ ಇಂತಹ ಕ್ರಮ ಕೈಗೊಳ್ಳಲು ಪೊಲೀಸರಿಗೆ ಯಾವ ಅಧಿಕಾರ ನೀಡಲಾಗಿದೆ ಎಂದು ಕೇಳಿದರು.
ಅಮಾನತಿಗೆ ಆಗ್ರಹ..
ತಾವು, ಶಾಸಕ ಡಾ. ಭರತ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು ಪೊಲೀಸ್ ಇಲಾಖೆಯ ವರ್ತನೆ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ, ಬಳಿಕವೂ ಇಂತಹ ಘಟನೆ ನಡೆದಿರುವುದು ಗಂಭೀರ ವಿಚಾರ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪೊಲೀಸ್ ಇಲಾಖೆ ಪೂರ್ವಗ್ರಹದಿಂದ ವರ್ತಿಸುತ್ತಿದೆ ಎಂಬ ಆರೋಪ ಮಾಡಿದ ಅವರು, ಪೊಲೀಸ್ ಅಧಿಕಾರಿಗಳು ಆಡಳಿತ ಪಕ್ಷದ ಕೈಗೊಂಬೆಗಳಂತೆ ವರ್ತಿಸಬಾರದು. ಸರ್ಕಾರಗಳು ಬದಲಾಗುತ್ತವೆ ಎಂಬುದನ್ನು ಪೊಲೀಸರು ನೆನಪಿನಲ್ಲಿಡಬೇಕು ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರು ಸೇರಿದಂತೆ ಘಟನೆಯಲ್ಲಿ ತಪ್ಪೆಸಗಿದ ಪೊಲೀಸ್ ಅಧಿಕಾರಿಗಳನ್ನು ಗುರುತಿಸಿ ತಕ್ಷಣ ಅಮಾನತುಗೊಳಿಸಬೇಕು. ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕುವ ಬದಲು ಅವರ ಅಹವಾಲುಗಳನ್ನು ಆಲಿಸಿ ನ್ಯಾಯ ಒದಗಿಸಬೇಕು. ಭಾರತೀಯ ಜನತಾ ಪಕ್ಷ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಜನಪ್ರತಿನಿಧಿಗಳಾಗಿ ಈ ಪೊಲೀಸ್ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.