ಮಹಿಳೆ ಮತ್ತು ಮಕ್ಕಳ ಪ್ರಕರಣಗಳಲ್ಲಿ ಸಮನ್ವಯತೆದೆ ಜಿಲ್ಲಾಧಿಕಾರಿ ಸೂಚನೆ
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತೊಂದರೆಗೀಡಾದ ಪ್ರಕರಣಗಳ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಠಾಣೆಯಲ್ಲಿ ಇಂತಹ ಪ್ರಕರಣಗಳು ಬಂದಾಗ ಸಂಬಂಧಿಸಿದ ಇಲಾಖೆ ಮಾಹಿತಿ ನೀಡುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026 ರ ಏಪ್ರಿಲ್ನಿಂದ ಸೆಪ್ಟೆಂಬರ್ವರೆಗೆ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಕುರಿತು 155 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 52 ಮಹಿಳೆಯರ ಮೇಲೆ ದೌರ್ಜನ್ಯ, 10 ಅತ್ಯಾಚಾರ ಪ್ರಕರಣ, 79 ಪೊಕ್ಸೋ ಪ್ರಕರಣಗಳು, ಒಂದು ಬಾಲ್ಯವಿವಾಹ ಪ್ರಕರಣ ದಾಖಲಾಗಿದೆ. ಇದಲ್ಲದೇ, 39 ಮಕ್ಕಳ ನಾಪತ್ತೆ ಪ್ರಕರಣಗಳು, 86 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಬಹುತೇಕರನ್ನು ಪತ್ತೆ ಹಚ್ಚಲಾಗಿದೆ. ವರದಕ್ಷಿಣೆ ಕಿರುಕುಳದ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10 ಪ್ರಕರಣಗಳು ತನಿಖೆ ಹಂತದಲ್ಲಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಲ್ಲಿ ಮೊದಲನೇ ಬಾರಿಗೆ ಗರ್ಭಿಣಿಯಾದವರಿಗೆ 5 ಸಾವಿರ ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ 4,438 ಫಲಾನುಭವಿಗಳು ದಾಖಲಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ. ಎರಡನೇ ಬಾರಿ ಗರ್ಭಿಣಿಯಾಗಿ ಹೆಣ್ಣು ಮಗುವಾದಲ್ಲಿ ರೂ. 6 ಸಾವಿರ ನೀಡಲಾಗುತ್ತಿದೆ. ಈ ಯೋಜನೆಯಡಿ 1406 ಫಲಾನುಭವಿಗಳು ದಾಖಲಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಮಾಹಿತಿ ನೀಡಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು 10 ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಖಾಸಗಿ, ಸರಕಾರಿ ಕಚೇರಿ, ಉದ್ಯಮ ಕೈಗಾರಿಕೆಗಳಲ್ಲಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 1823 ಸಮಿತಿ ರಚನೆಯಾಗಿದೆ. ಬಾಕಿ ಇರುವ ಕಾರ್ಖಾನೆ ಕೈಗಾರಿಕೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಕಾರ್ಮಿಕ ಇಲಾಖೆ, ಬಾಯ್ಲರ್, ಕೈಗಾರಿಕೆ ಇಲಾಖೆಗಳಿಗೆ ಸೂಚಿಸಿದರು.
ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಶುಪಾಲನಾ ಕೇಂದ್ರ ತೆರೆಯಲು ಅನುಮೋದನೆ ದೊರೆತಿರುತ್ತದೆ ಎಂದು ಸಭೆಗೆ ತಿಳಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.