ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ಬೇಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವಾಗ್ದಾಳಿ
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸಿದರು.
ಪರೀಕ್ಷೆ ಮುಂದೂಡಲು ಮನವಿ:
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಧಾರ್ಮಿಕ ಭಾವನೆ, ಸಂವೇದನೆ ಹಾಗೂ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತವಾಗಿರದೆ, ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯಿಸುವ ಸಾಮಾನ್ಯ ನಿಯಮಗಳನ್ನು ಪಾಲಿಸಬೇಕು. ಧಾರ್ಮಿಕ ಕಾರ್ಯಕ್ರಮಗಳು ಅಥವಾ ಸೂಕ್ಷ್ಮ ಸಂದರ್ಭಗಳಲ್ಲಿ ರಜೆ ನೀಡುವ ಹಾಗೂ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಶಿಕ್ಷಣ ಸಂಸ್ಥೆಗಳು ಮಾನವೀಯವಾಗಿ ಚಿಂತಿಸಬೇಕು ಎಂದು ಹೇಳಿದರು.
ಪೊಲೀಸರ ಕ್ರಮಕ್ಕೆ ಆಕ್ಷೇಪ:
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾನೂನುಬದ್ಧ ಸಂಘಟನೆಯಾಗಿದ್ದು, ವಿದ್ಯಾರ್ಥಿಗಳ ಪರವಾಗಿ ಮನವಿ ಸಲ್ಲಿಸಲು ತೆರಳಿದ್ದವರನ್ನು ಪೊಲೀಸರು ತಡೆದಿರುವುದು ಸರಿಯಲ್ಲ. ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಹಿಳಾ ಪೊಲೀಸರ ಬದಲಾಗಿ ಪುರುಷ ಪೊಲೀಸರನ್ನು ಕಳುಹಿಸಿದ್ದೇಕೆ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಕೈ ಮಾಡಿರುವುದು ಮಾಧ್ಯಮಗಳಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ ಕಂಡುಬಂದಿದೆ ಎಂದು ಹೇಳಿದ ಅವರು, ಪೊಲೀಸ್ ಇಲಾಖೆಯ ವರ್ತನೆ ಅತಿರೇಕದಿಂದ ಕೂಡಿತ್ತು ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಮನವಿಯನ್ನು ಆಲಿಸಿ ನ್ಯಾಯಯುತ ಪರಿಹಾರ ಕಂಡುಕೊಳ್ಳುವ ಬದಲು ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಬಂಧನದ ಬಳಿಕ ವಿದ್ಯಾರ್ಥಿಗಳ ವಿರುದ್ಧ ಬಾಂಡ್ ಓವರ್ ಕ್ರಮ ಕೈಗೊಳ್ಳುವ ಸಾಧ್ಯತೆಯೂ ವ್ಯಕ್ತವಾಗಿತ್ತು. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಕ್ರಮ ಕೈಗೊಳ್ಳದಂತೆ ತಿಳಿಸಿದ್ದೇನೆ. ಬಳಿಕ ಬಾಂಡ್ ಓವರ್ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಈ ವಿಚಾರವನ್ನು ಸೂಕ್ಷ್ಮವಾಗಿ ನಿಭಾಯಿಸುವಲ್ಲಿ ವಿಫಲವಾಗಿವೆ. ಗೃಹ ಸಚಿವರ ಅಧೀನದಲ್ಲಿರುವ ಪೊಲೀಸ್ ಇಲಾಖೆಯ ಕಾರ್ಯವೈಖರಿ ಪ್ರಶ್ನಾರ್ಹವಾಗಿದೆ ಎಂದು ಟೀಕಿಸಿದರು.
ಅಭಿವೃದ್ಧಿ ಕಾರ್ಯಗಳು ಕುಂಠಿತ:
ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಅಭಿವೃದ್ಧಿ ಕಾರ್ಯಗಳ ಬದಲು ಘೋಷಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆಯೂ ಪ್ರಶ್ನೆಗಳಿವೆ. ರೈತರ ಬೆಳೆ ವಿಮೆಯ ಅರ್ಹತಾ ಮಾನದಂಡಗಳ ಬದಲಾವಣೆ ಹಾಗೂ ಅತಿವೃಷ್ಟಿ-ಅನಾವೃಷ್ಟಿಯ ಸಂದರ್ಭದಲ್ಲಿ ರೈತರಿಗೆ ಸೂಕ್ತ ನೆರವು ಸಿಗದಿರುವುದು ಕಳವಳಕಾರಿ ಎಂದು ಹೇಳಿದರು.