‘ಸಂವಿಧಾನ ಮತ್ತು ಮತದಾನದ ಹಕ್ಕಿನ ರಕ್ಷಣೆಯಿಂದ ಕಾಂಗ್ರೆಸ್ ಹಿಂದೆ ಸರಿಯುವುದಿಲ್ಲ’: ಪದ್ಮರಾಜ್ ಆರ್. ಪೂಜಾರಿ

‘ಸಂವಿಧಾನ ಮತ್ತು ಮತದಾನದ ಹಕ್ಕಿನ ರಕ್ಷಣೆಯಿಂದ ಕಾಂಗ್ರೆಸ್ ಹಿಂದೆ ಸರಿಯುವುದಿಲ್ಲ’: ಪದ್ಮರಾಜ್ ಆರ್. ಪೂಜಾರಿ


ಮಂಗಳೂರು: ಒಬ್ಬನೇ ಒಬ್ಬ ನೈಜ ಮತದಾರನ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳುವುದು ಕಾಂಗ್ರೆಸ್‌ನ ದೃಢ ನಿರ್ಧಾರ. ಸಂವಿಧಾನ ಮತ್ತು ಮತದಾನದ ಹಕ್ಕಿನ ರಕ್ಷಣೆಗೆ ನಾವು ಹಿಂದೆ ಸರಿಯುವುದಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ. 

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೂ ಕಾಂಗ್ರೆಸ್ ನಿಯೋಗ ತೆರಳಿ, ಫಾರಂ-7 ಅರ್ಜಿಗಳ ಕುರಿತು ಸಂಪೂರ್ಣ ಮಾಹಿತಿ ಕೇಳಿದೆ. ಜಿಲ್ಲೆಯಲ್ಲಿ ಇದುವರೆಗೆ ಎಷ್ಟು ಫಾರಂ-7 ಅರ್ಜಿಗಳು ಬಂದಿವೆ, ಅವುಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ ಮತ್ತು ಅರ್ಜಿಗಳನ್ನು ಪರಿಶೀಲಿಸುವ ಪ್ರಕ್ರಿಯೆ ಏನು ಎಂಬ ಮಾಹಿತಿಯನ್ನು ಪಡೆಯಲಾಗಿದೆ ಎಂದರು.

ಮತದಾರರ ಪಟ್ಟಿಯಿಂದ ಹೆಸರು ಅಳಿಸುವುದು ಕೇವಲ ಚುನಾವಣಾ ಹಕ್ಕಿಗೆ ಸಂಬಂಧಿಸಿದ ವಿಚಾರವಲ್ಲ. ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯುವುದಕ್ಕೂ ಇದರಿಂದ ತೊಂದರೆಯಾಗಬಹುದು.

ಆದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮತದಾರರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದಲ್ಲಿ ಅಧಿಕಾರಿಗಳೂ ಸೇರಿದಂತೆ ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಇದು ಯಾವುದೇ ಪಕ್ಷದ ಕಾರ್ಯಕರ್ತರ ವಿಚಾರವಲ್ಲ, ಪ್ರತಿಯೊಬ್ಬ ನೈಜ ಮತದಾರನ ಹಕ್ಕಿನ ಪ್ರಶ್ನೆ. ಯಾರೇ ಆಗಿರಲಿ, ಮತದಾರರ ಹಕ್ಕನ್ನು ದುರ್ಬಳಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಪ್ರಕರಣ ದಾಖಲು..

ಮತದಾರರ ಪಟ್ಟಿಯಿಂದ ನೈಜ ಮತದಾರರ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಫಾರಂ-7 ದುರ್ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು

ಹಾಗೂ ಬೆಳ್ತಂಗಡಿಯಲ್ಲಿ ಒಂದು ಸೇರಿ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ. ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲೂ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆಯಾ ಬ್ಲಾಕ್ ಕಾಂಗ್ರೆಸ್ ಮುಖಂಡರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮೂಲ್ಕಿ-ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಾರಂ-7 ಅರ್ಜಿಗಳ ದುರ್ಬಳಕೆ ನಡೆದಿದೆ ಎಂಬ ಆರೋಪದ ಆಧಾರದಲ್ಲಿ ಕಾನೂನು ಕ್ರಮಕ್ಕೆ ಮುಂದಾಗಿರುವುದಾಗಿ ಹೇಳಿದರು.

ಈ ಪ್ರಕರಣದಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. ೨೩ರಂದು ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿದ್ದು, ಅಕ್ಟೋಬರ್ ೬ರಂದು ನ್ಯಾಯಾಲಯದ ನಿರ್ದೇಶನದ ಮೇರೆಗೆ ಕಾವೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಶಿಧರ ಹೆಗ್ಡೆ, ಲಾರೆನ್ಸ್, ವಿನುರಾಜ್ ಭಂಡಾರಿ, ಕೆ.ಟಿ.ಸುಧೀರ್, ಸಲೀಂ, ಅಶೋಕ್, ಉದಯ ಕುಮಾರ್, ಮೋಹನ್ ಕೋಟ್ಯಾನ್, ನೀರಜ್‌ಪಾಲ್, ಅಪ್ಪಿ, ಭಾಸ್ಕರ್ ರಾವ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article