ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಂದ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಸಮಸ್ಯೆ: ಗಂಭೀರವಾಗಿ ಪರಿಗಣಿಸಲು ಶಾಸಕರ ಸೂಚನೆ

ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಂದ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಸಮಸ್ಯೆ: ಗಂಭೀರವಾಗಿ ಪರಿಗಣಿಸಲು ಶಾಸಕರ ಸೂಚನೆ


ಮಂಗಳೂರು: ವಿದ್ಯಾರ್ಥಿಗಳು ದೂರದ ಹಾಸ್ಟೆಲ್ಗಳಿಂದ ಮಂಗಳೂರು ನಗರದ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಎದುರಿಸುತ್ತಿರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಶಾಸಕ ವೈ ಭರತ್ ಶೆಟ್ಟಿ ಸೂಚಿಸಿದರು.

ಅವರು ಬುಧವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ನಡೆದ ಮಂಗಳೂರು ತಾಲೂಕು ದ್ವಿತೀಯ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ವತಿಯಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಂಚಿಕೆ ಮಾಡುವ ಸಂದರ್ಭದಲ್ಲಿ ಅವರ ಶಿಕ್ಷಣ ಸಂಸ್ಥೆಗಳ ದೂರ ಹಾಗೂ ಪ್ರಯಾಣದ ಅನುಕೂಲಗಳನ್ನು ಪರಿಗಣಿಸಿ, ಸೂಕ್ತ ಸೌಲಭ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ವಿವಿಧ ಪ್ರದೇಶಗಳಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಂಚಿಕೆ ಮಾಡಲಾಗುತ್ತಿದ್ದು, ಕೆಲವರಿಗೆ ಶಿಕ್ಷಣ ಸಂಸ್ಥೆಗಳಿಂದ ಬಹಳ ದೂರದಲ್ಲಿರುವ ಹಾಸ್ಟೆಲ್ಗಳು ದೊರೆಯುತ್ತಿರುವುದರಿಂದ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡುತ್ತಿದ್ದು, ಹಾಸ್ಟೆಲ್ ಹಂಚಿಕೆ ಪ್ರಕ್ರಿಯೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲಕರ ವಾತಾವರಣ ಒದಗಿಸುವುದು ಇಲಾಖೆಗಳ ಜವಾಬ್ದಾರಿಯಾಗಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ನಿರ್ದೇಶನ ನೀಡಿದರು. ವಿದ್ಯಾರ್ಥಿಗಳು ದೂರದ ಹಾಸ್ಟೆಲ್ಗಳಿಂದ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ, ಬಿಸಿಎಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಹಾಸ್ಟೆಲ್ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಮಂಗಳೂರು ನಗರ ಪ್ರದೇಶದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಪ್ರಕರಣಗಳ ಹರಡುವಿಕೆಯನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. 

ಮಲೇರಿಯಾ, ಡೆಂಗ್ಯೂ ಪ್ರಕರಣಗಳ ಕುರಿತು ಚರ್ಚಿಸಿದ ಶಾಸಕರು,  ನಗರ ವ್ಯಾಪ್ತಿಯ ಜನವಸತಿ ಪ್ರದೇಶಗಳು ಹಾಗೂ ವಲಸೆ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ವಿಶೇಷ ನಿಗಾ ವಹಿಸಿ, ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಆಯುಷ್ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಯೋಮಿತ್ರ, ಆರೋಗ್ಯ ಶಿಬಿರ ಹಾಗೂ ಆಯುರ್ವಿದ್ಯಾ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆರೋಗ್ಯ ಶಿಬಿರಗಳು ಹಾಗೂ ವಿವಿಧ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳ ಪ್ರಯೋಜನ ಸಾರ್ವಜನಿಕರಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಶಾಲೆಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಾಗದಂತೆ ಸಂಬಂಧಪಟ್ಟ ಇಲಾಖೆಗಳು ನಿಗಾ ವಹಿಸಿ ವರದಿ ಸಲ್ಲಿಸಬೇಕು ಎಂದು ಶಾಸಕರು ಸೂಚಿಸಿದರು.

ಬೀದಿ ನಾಯಿಗಳ ಹಾವಳಿ ಹಾಗೂ ನಾಯಿ ಕಡಿತ ಪ್ರಕರಣಗಳನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನವಸತಿ ಪ್ರದೇಶಗಳು ಹಾಗೂ ಶಾಲೆಗಳ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮವಹಿಸಬೇಕು. ನಾಯಿ ಕಡಿತ ಪ್ರಕರಣಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದರೊಂದಿಗೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾ, ತಾಲೂಕು ಪಂಚಾಯತ್ ಆಡಳಿತಾಧಿಕಾರಿ  ಶಕುಂತಲಾ ಶೆಣೈ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ವಿವಿಧ ಇಲಾಖಾಧಿಕಾರಿಗಳು ಮತ್ತಿತ್ತರರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article