ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ: ಶಾಸಕ ಡಾ. ವೈ. ಭರತ್ ಶೆಟ್ಟಿ ಆಕ್ರೋಶ
Tuesday, October 27, 2026
ಮಂಗಳೂರು: ಬಡವರ ಸಮಸ್ಯೆಗಳಿಗೆ ಪರಿಹಾರ ನೀಡಲು ಯೋಗ್ಯತೆಯಿಲ್ಲದ ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ, ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪರಿಸರದಲ್ಲಿ, ‘ನಮ್ಮ ಹಕ್ಕು ನಮಗೆ ನೀಡಿ’ ಎಂಬ ಘೋಷಣೆಯೊಂದಿಗೆ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಉಚಿತ ಭಾಗ್ಯಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ, ಈಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸಮರ್ಪಕವಾಗಿ ಜಮೆ ಮಾಡುತ್ತಿಲ್ಲ. ಮಹಿಳೆಯರಿಗೆ ಸೇರಬೇಕಾದ ಹಣ ಎಲ್ಲಿ ಹೋಯಿತು? ಆ ಹಣ ಯಾರ ಜೇಬಿಗೆ ಸೇರಿದೆ? ಎಂಬುದಕ್ಕೆ ಸರಕಾರ ಉತ್ತರ ನೀಡಬೇಕು ಎಂದು ಡಾ. ಭರತ್ ಶೆಟ್ಟಿ ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಡವರು ಮತ್ತು ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅವರು ಹೇಳಿದರು.
ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಅಡ್ಯಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಕಮಲಾಕ್ಷ ತಲ್ಲಿಮಾರ್, ಉಳಾಯಿಬೆಟ್ಟು ಗ್ರಾಮದ ನಿಕಟಪೂರ್ವ ಅಧ್ಯಕ್ಷರಾದ ಹರಿಕೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ ರಣದೀಪ್ ಕಾಂಚನ್, ಜಿಲ್ಲೆಯ ಸಹಸಂಚಾಲಕರಾದ ಲೋಹಿತ್ ಅಮಿನ್, ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷೆ ಸುಮಿತ್ರಾ ಕರಿಯ, ಹಿರಿಯ ನಾಗರಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಮ ಅಮೀನ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಮುಖರಾದ ಉಮೇಶ್ ಕೋಟ್ಯಾನ್, ನಿಕಟ ಪೂರ್ವ ಮಹಾನಗರ ಪಾಲಿಕೆ ಮೇಯರ್, ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.




