ಅನುದಾನರಹಿತ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ಡಾ. ಮೋಹನ್ ಆಳ್ವ
ಅವರು ಅ.13 ರಂದು ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ)ದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ನ ಸಭಾಂಗಣದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಯಾವುದೇ ಸರಕಾರಿ ಅನುದಾನವಿಲ್ಲದೆ ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಮತ್ತು ಫಲಿತಾಂಶದಲ್ಲೂ ಮುಂಚೂಣಿಯಲ್ಲಿವೆ. ಆದರೂ ಸರಕಾರ ಶಿಕ್ಷಣ ಕ್ಷೇತ್ರದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಖೇದಕರ ಸಂಗತಿ. ಪಠ್ಯಕ್ರಮ ಬದಲಾವಣೆ, ಪರೀಕ್ಷಾ ಪದ್ಧತಿ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ನಿರ್ಧಾರಗಳು ವಿದ್ಯಾರ್ಥಿಗಳು ಹಾಗೂ ಖಾಸಗಿ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತವೆ. ಸಮಸ್ಯೆ, ಸವಾಲುಗಳಿಗೆ ಶಿಕ್ಷಣ ತಜ್ಞರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಲಹೆಗಳನ್ನು ಪಡೆದು ಪಾರದರ್ಶಕವಾಗಿ ಬದಲಾವಣೆಗಳನ್ನು ಜಾರಿಗೊಳಿಸಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಬದಲಾವಣೆಗಳು ಮತ್ತು ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಇದರಿಂದ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸಂಕಷ್ಟ ಅನುಭವಿಸುವಂತಾಗಿದೆ. ಕೊರೊನಾ ಸಂದರ್ಭದಲ್ಲಿ ಶುಲ್ಕ ಸಂಗ್ರಹವಾಗದೆ ಹಲವು ಶಿಕ್ಷಣ ಸಂಸ್ಥೆಗಳು ತೊಂದರೆಗೀಡಾಗಿದ್ದವು. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕುಪ್ಮಾ ಸಂಘಟನೆ ಸ್ಥಾಪನೆಯಾಗಿದ್ದು, ಕಳೆದ ಎರಡೂವರೆ ವರ್ಷಗಳಲ್ಲಿ ಮಹತ್ವದ ಸಾಧನೆ ಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಉಜಿರೆ ಎಸ್ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿವೆ. ಶಿಕ್ಷಣ ನೀತಿ ರೂಪಿಸುವಾಗ ಶಿಕ್ಷಣ ತಜ್ಞರ ಸಲಹೆ ಪಡೆಯಬೇಕು. ಶಿಕ್ಷಕರನ್ನು ಪ್ರಶಸ್ತಿಗೆ ಪರಿಗಣಿಸುವ ಸಂದರ್ಭದಲ್ಲಿಯೂ ಅನುದಾನರಹಿತ ಸಂಸ್ಥೆಗಳ ಶಿಕ್ಷಕರನ್ನು ಗುರುತಿಸಬೇಕು ಎಂದರು.
6 ಮಂದಿ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ:
ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಆಳ್ವಾಸ್ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರೊ. ಅನಿಲ್ ಮಸ್ಕರೇನಸ್, ಮೂಡುಬಿದಿರೆಯ ಎಕ್ಸ್ಲೆಂಟ್ ಪ.ಪೂ. ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಡಾ. ಪ್ರಶಾಂತ ರಾಮಚಂದ್ರ ಹೆಗ್ಡೆ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ. ಪ್ರಸನ್ನ ಕುಮಾರ್ ಐತಾಳ್, ಮಂಗಳೂರು ಶ್ರೀ ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್ ನಾಯಕ್ ಕೆ., ಶ್ರೀ ರಾಮಕೃಷ್ಣ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಯಶೋಧ ಯು. ಶೆಟ್ಟಿ ಹಾಗೂ ಮಂಗಳೂರಿನ ಎಕ್ಸ್ಪರ್ಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ಕರುಣಾಕರ ಬಲ್ಕೂರು ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿ ಗೌರವಿಸಲಾಯಿತು. ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ದನ ಕೆ.ಎನ್. ಅವರನ್ನು ಸನ್ಮಾನಿಸಲಾಯಿತು.
ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಡಾ. ಕೆ.ಸಿ. ನಾಯ್ಕ್, ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಚಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಡಾ. ಸಂಜೀವ ರೈ ಉಪಸ್ಥಿತರಿದ್ದರು.
ಜಿಲ್ಲಾ ಕುಪ್ಮಾ ಸಮಿತಿಯ ಕಾರ್ಯದರ್ಶಿ ಡಾ. ಮಂಜುನಾಥ್ ಎಸ್. ರೇವಣಕರ್ ಸ್ವಾಗತಿಸಿ, ಜಿಲ್ಲಾ ಸಮಿತಿ ಅಧ್ಯಕ್ಷ ಯುವರಾಜ್ ಜೈನ್ ವಂದಿಸಿದರು. ಡಾ. ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.