ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಕರ್ಷಕ ಏರೋಫಿಲಿಯಾ-2026 ಏರ್ ಶೋ
ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಾಂತ್ರಿಕ ಕೌಶಲ್ಯ ಮತ್ತು ವೈಜ್ಞಾನಿಕ ಜ್ಞಾನವನ್ನು ಬಳಸಿ ಸ್ವತಃ ವಿನ್ಯಾಸಗೊಳಿಸಿ ತಯಾರಿಸಿದ ವಿವಿಧ ಮಾದರಿಯ ವಿಮಾನಗಳು ಆಕಾಶದಲ್ಲಿ ಹಾರಾಡಿ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದವು. ವಿಮಾನಗಳ ಹಾರಾಟ, ಅವುಗಳ ವಿನ್ಯಾಸ ಮತ್ತು ಕಾರ್ಯವೈಖರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ವಿಶೇಷ ಆಸಕ್ತಿ ಮತ್ತು ಕುತೂಹಲ ಮೂಡಿಸಿತು.
ಟಿಫ್ ಲ್ಯಾಬ್ಸ್ ಸಂಸ್ಥೆಯ ಸಂಸ್ಥಾಪಕ ಡೇನಿಯಲ್ ಡಿ’ಸೋಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಪ್ರಯತ್ನವನ್ನು ಶ್ಲಾಘಿಸಿದರು.
ಸುಮಾರು 3,000 ವಿದ್ಯಾರ್ಥಿಗಳು ಈ ರೋಮಾಂಚಕ ಏರ್ ಶೋಗೆ ಸಾಕ್ಷಿಯಾದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ನವೀನ ಚಿಂತನೆ ಮತ್ತು ಸೃಜನಶೀಲತೆಯನ್ನು ಬೆಳೆಸುವುದರ ಜೊತೆಗೆ, ಏರೋಸ್ಪೇಸ್ ಕ್ಷೇತ್ರ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ಕ್ಷೇತ್ರಗಳ ಬಗ್ಗೆ ಆಸಕ್ತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನವನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಅವಕಾಶ ಕಲ್ಪಿಸಿದ ‘ಏರೋಫಿಲಿಯಾ-2026 ಕಾರ್ಯಕ್ರಮವು ಸಿನರ್ಜಿಯಾ-2026ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿ ಮೂಡಿಬಂದಿತು.