ಯುವತಿಯ ಕೊಲೆ ಯತ್ನ: ಆರೋಪಿ ಬಂಧನ

ಯುವತಿಯ ಕೊಲೆ ಯತ್ನ: ಆರೋಪಿ ಬಂಧನ

ಮಂಗಳೂರು: ಮೂರು ವರ್ಷಗಳಿಂದ ಪರಿಚಯವಿದ್ದ ಯುವತಿಯೊಬ್ಬಳನ್ನು ಕಾರಿನಲ್ಲಿ ಕರೆದೊಯ್ದು ಬಿಸಿಲೆ ಘಾಟಿಯ ನಿರ್ಜನ ಪ್ರದೇಶದಲ್ಲಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಡಬ ಕೊಣಾಜೆ ಗ್ರಾಮದ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ದೂರುದಾರ ಯುವತಿ ಹಾಗೂ ಆರೋಪಿ ಪ್ರಸಾದ್ ಕಳೆದ ಸುಮಾರು ಮೂರು ವರ್ಷಗಳಿಂದ ಪರಿಚಯ ಹೊಂದಿದ್ದು, ಸ್ನೇಹದಿಂದಿದ್ದರು. ನವೆಂಬರ್ 4ರಂದು ಸಂಜೆ ಆರೋಪಿತ ಪ್ರಸಾದ್, ಯುವತಿಯನ್ನು ಉಪ್ಪಿನಂಗಡಿಯಿಂದ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಕುಲ್ಕುಂದ ಮಾರ್ಗವಾಗಿ ಬಿಸಿಲೆ ಘಾಟಿಯ ಕಡೆಗೆ ಪ್ರಯಾಣ ಬೆಳೆಸಿದ್ದಾನೆ. ರಾತ್ರಿ ವೇಳೆ ಬಿಸಿಲೆ ಘಾಟಿ ಮಾರ್ಗದ ನಿರ್ಜನ ಪ್ರದೇಶದಲ್ಲಿ ಯುವತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಲ್ಲೆಯ ತೀವ್ರತೆಗೆ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಯುವತಿ ಮೃತಪಟ್ಟಿದ್ದಾಳೆಂದು ಭಾವಿಸಿದ ಆರೋಪಿ, ಆಕೆಯನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ತೆರಳಿದ್ದ. ನವೆಂಬರ್ 5 ರಂದು ಬೆಳಿಗ್ಗೆ ಯುವತಿಗೆ ಪ್ರಜ್ಞೆ ಮರಳಿದ್ದು, ಅಲ್ಲಿಂದ ಸುಬ್ರಹ್ಮಣ್ಯಕ್ಕೆ ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ನಡೆದ ಘಟನೆಯ ಕುರಿತು ಪೊಲೀಸ್ ಠಾಣೆಗೆ ಆಗಮಿಸಿ ಸಂತ್ರಸ್ತೆ ದೂರು ನೀಡಿದ್ದಾರೆ.

ಪ್ರಕರಣ ಯೆಸಳೂರು ಠಾಣೆಗೆ ವರ್ಗಾವಣೆ: ಯುವತಿ ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 01/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 118(1) ಮತ್ತು 109(1)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಘಟನೆ ನಡೆದ ಸ್ಥಳವು ಹಾಸನ ಜಿಲ್ಲೆಯ ಯೆಸಳೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಂದಿನ ತನಿಖೆ ಹಾಗೂ ಕಾನೂನು ಕ್ರಮಕ್ಕಾಗಿ ಯೆಸಳೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಪ್ರಸಾದ್ನನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಯೆಸಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಬಿಸಿಲೆ ಘಾಟಿಯ ನಿರ್ಜನ ಪ್ರದೇಶದಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಯಸಳೂರು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article