ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ: ಶಾಸಕ ಕಾಮತ್

ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ: ಶಾಸಕ ಕಾಮತ್


ಮಂಗಳೂರು: ಅಧಿಕಾರಕ್ಕೆ ಬರುವ ಮುನ್ನ ಭಾರೀ ಆಶ್ವಾಸನೆಗಳನ್ನು ನೀಡಿ ಇದೀಗ ರಾಜ್ಯದ 41 ಸಾವಿರ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ದ್ರೋಹ ಬಗೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚಳಿ, ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ನಡುವೆ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸದಿರುವುದು ಬೇಜವಾಬ್ದಾರಿತನ. ಆಶಾ ಕಾರ್ಯಕರ್ತೆಯರಿಗೆ ವೇತನ ಹಾಗೂ ಸೌಲಭ್ಯ ನೀಡಲು ಬೊಕ್ಕಸದಲ್ಲಿ ಹಣ ಇಲ್ಲ ಎನ್ನುವ ರಾಜ್ಯ ಸರ್ಕಾರ, ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ, ಸದಸ್ಯ ಹೆಸರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಸಹಿತ ವೇತನ ಹಾಗೂ ಸೌಲಭ್ಯ ನೀಡುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ನಮ್ಮ ಆರೋಗ್ಯ ವ್ಯವಸ್ಥೆಯ  ಬೆನ್ನೆಲುಬಾಗಿ ಹಗಲಿರುಳು ದುಡಿಯುತ್ತಾರೆ. ಮನೆಮನೆಗೆ ತೆರಳಿ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ. ಇಂತಹವರ ಬಗ್ಗೆ ತಾತ್ಸಾರ ಧೋರಣೆ ತೋರುವುದು ಒಪ್ಪಲು ಸಾಧ್ಯವೇ ಇಲ್ಲ. ಈ ಹಿಂದೆಯೂ ಭರವಸೆ ನೀಡಿ ಮೋಸ ಮಾಡಿರುವ ರಾಜ್ಯ ಸರ್ಕಾರವನ್ನು ನಂಬುವ ಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲವಾಗಿದ್ದು, ಕೂಡಲೇ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಆರ್ಥಿಕ ಭದ್ರತೆ ಮತ್ತು ಗೌರವಯುತ ಬದುಕು ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article