BREAKING
ದಕ್ಷಿಣ ಕನ್ನಡ

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ.೨೫ ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್‌ನ ಮಕ್ಕಳ ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು,

ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

📢 ಡೈಲಿ ಪಲ್ಸ್ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!