ಲಾಯಿಲ-ನಡ ಪರಿಸರದಲ್ಲಿ ಹುಲಿ ತಿರುಗಾಟದ ಶಂಕೆ!
ಉಜಿರೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಹೊಂದಿಕೊಂಡಿರುವ ಲಾಯಿಲ ಮತ್ತು ನಡ ಗ್ರಾಮಗಳ ಅಗಳಿ, ನಡ, ಕಿಂಡಾಜೆ, ಕೂಡೇಲು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ತಿರುಗಾಟದ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಲಾಯಿಲ ಮತ್ತು ನಡ ಗ್ರಾಮಗಳ ಪ್ರದೇಶಗಳು ಒಂದಕ್ಕೊಂದು ಸಮೀಪದಲ್ಲಿದ್ದು, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿವೆ. ಈ ಭಾಗದಲ್ಲಿ ಚಿರತೆಗಳ ಓಡಾಟ ಸಾಮಾನ್ಯವಾಗಿದ್ದು, ಈಗಾಗಲೇ ಹಲವು ಸಾಕು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಹುಲಿಯೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿರುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಕಳೆದ ಎರಡು ದಿನಗಳ ಹಿಂದೆ ಸ್ಥಳೀಯ ವ್ಯಕ್ತಿಯೊಬ್ಬರು ಮನೆಯ ಸಮೀಪ ಕಾಡಂಚಿನ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿಯೊಂದು ಎದುರಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಪರಿಸರದಲ್ಲಿ ಹುಲಿ ಸಂಚಾರದ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ ಕಂಡ ಪ್ರಾಣಿ ಹುಲಿಯೇ ಅಥವಾ ಚಿರತೆಯೇ ಎಂಬ ಬಗ್ಗೆ ಅಧಿಕೃತವಾಗಿ ದೃಢಪಟ್ಟಿಲ್ಲ. ಸಾಮಾನ್ಯವಾಗಿ ಹುಲಿ ಮತ್ತು ಚಿರತೆಯನ್ನು ಗುರುತಿಸುವಲ್ಲಿ ಜನರಿಗೆ ಗೊಂದಲ ಉಂಟಾಗುವ ಸಾಧ್ಯತೆಯೂ ಇದೆ. ಇದಲ್ಲದೆ, ರಾತ್ರಿ ವೇಳೆಯಲ್ಲಿ ಅರಣ್ಯ ಪ್ರದೇಶದಿಂದ ಕಾಡುಪ್ರಾಣಿಗಳ ಬೊಬ್ಬೆ ಹಾಕುವಂತಹ ವಿಚಿತ್ರ ಶಬ್ದಗಳು ಕೇಳಿಬರುತ್ತಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಅರಣ್ಯ ಪ್ರದೇಶದ ಸಮೀಪದಲ್ಲಿರುವ ಮನೆಗಳಲ್ಲಿ ವಾಸಿಸುವ ಕುಟುಂಬಗಳು, ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಚಿಂತಿತರಾಗಿದ್ದಾರೆ. ಬೆಳಗ್ಗೆ ಮತ್ತು ಸಂಜೆ ಶಾಲೆಗೆ ತೆರಳುವ ಹಾಗೂ ಮನೆಗೆ ಮರಳುವ ಮಕ್ಕಳು, ಕೃಷಿ ಚಟುವಟಿಕೆಗಳಿಗೆ ತೆರಳುವವರು ಮತ್ತು ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಆತಂಕದಲ್ಲಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬರಲು ಕೂಡ ಕೆಲವರು ಹಿಂದೇಟು ಹಾಕುತ್ತಿದ್ದಾರೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಮೀಪದ ಅರಣ್ಯ ಪ್ರದೇಶವಾಗಿರುವುದರಿಂದ ಈ ಭಾಗದಲ್ಲಿ ಹುಲಿ ಸಂಚಾರದ ಸಾಧ್ಯತೆಯನ್ನು ಸಂಪೂರ್ಣವಾಗಿ ಅಲ್ಲಗಳೆಯುವಂತಿಲ್ಲ. ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿ ಪ್ರಾಣಿಯ ಚಲನವಲನ ಪತ್ತೆಹಚ್ಚಬೇಕು. ಹೆಜ್ಜೆ ಗುರುತು, ಪ್ರಾಣಿಗಳ ದಾಳಿ ಮತ್ತು ಇತರ ಕುರುಹುಗಳನ್ನು ಪರಿಶೀಲಿಸಿ ಹುಲಿ ಅಥವಾ ಚಿರತೆ ಇರುವಿಕೆಯನ್ನು ಖಚಿತಪಡಿಸಬೇಕು. ಅಲ್ಲದೆ, ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡುವ ಮೂಲಕ ಜನರು ಹಾಗೂ ಸಾಕುಪ್ರಾಣಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.